Document

ಪ್ರಖ್ಯಾತ ನಟಿ ಲೀಲಾವತಿ ವಿಧಿವಶ

Janataa24 NEWS DESK

pro 5
ನಟಿ ಲೀಲಾವತಿ/ Actress Leelavati

ಬೆಂಗಳೂರು: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದು, ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನುನೀಡಲಾಗುತ್ತಿತ್ತು. ಕೆಲ ದಿನಗಳಿಂದ ಅನಾರೋಗ್ಯದಿಂದ (Illness) ಬಳಲುತ್ತಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಆರೋಗ್ಯ ಹದಗೆಟ್ಟಿತ್ತು.

ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದರು. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಯ್ತು.

ಲೀಲಾವತಿ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗ್ಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ, ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ದರು.

ಕೃಷಿಯಲ್ಲಿ ಸಕ್ರಿಯರಾಗಿದ್ದ ತಾಯಿ-ಮಗ

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಇದೀಗ ವಿನೋದ್ ರಾಜ್ ತಾಯಿ ಕಳೆದುಕೊಂಡು ಒಬ್ಬಂಟಿಯಾಗಿದ್ದಾರೆ.

ಲೀಲಾವತಿ ಸಿನಿಮಾಗಳು

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.

ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು. ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.

ಚಂದನವನದ ಅಂದದ ಗೊಂಬೆ

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

Document

Leave a Reply

Your email address will not be published. Required fields are marked *