ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Janataa24 NEWS DESK

alok kumar

ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ 1994 ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುಂದಿನ ಆದೇಶದವರೆಗೂ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ನೇಮಿಸಲಾಗಿದೆ.

ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಇದಲ್ಲದೆ, ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *